ಯಡಿಯೂರಪ್ಪರನ್ನು ಆಸ್ಪತ್ರೆಗೆ ದಾಖಲಿಸಿದ ಸರ್ಕಾರ;
ಆರೋಗ್ಯ ತಪಾಸಣೆಗೆ 5 ವೈದ್ಯರ ತಂಡ
ಬೆಂಗಳೂರು: ಭೂಮಿ ಡಿನೋಟಿಫೈ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ತೀವ್ರ ಎದೆನೋವು, ಬೆನ್ನುನೋವು ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ರವಿವಾರ ಮಧ್ಯರಾತ್ರಿ ಹೊತ್ತಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಅವರನ್ನು ವಿಶೇಷ ಭದ್ರತೆಯಲ್ಲಿ ಆಂಬ್ಯುಲೆನ್ಸ್ ವಾಹನದಲ್ಲಿ ಕರೆತಂದು ಆಸ್ಪತ್ರೆಯ ಮೂರನೆ ಮಹಡಿಯಲ್ಲಿನ ಕೊಠಡಿ ಸಂಖ್ಯೆ-304ರ ವಿಶೇಷ ನಿಗಾ ಘಟಕದಲ್ಲಿ ಇರಿಸಲಾಗಿದೆ.ಐದು ಮಂದಿಯ ವೈದ್ಯರ ತಂಡ ಯಡಿಯೂರಪ್ಪರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಎದೆನೋವು, ಸಕ್ಕರೆ ಖಾಯಿಲೆ, ಮೂತ್ರಪಿಂಡ ಸಮಸ್ಯೆ ಮತ್ತು ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
48 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.ಮೂತ್ರಪಿಂಡ ಸಮಸ್ಯೆ ಹಿನ್ನೆಲೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದ ನಂತರವಷ್ಟೆ ಯಡಿಯೂರಪ್ಪನವರ ಆರೋಗ್ಯದ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯ. ಅಲ್ಲದೆ, ಅವರಿಗೆ ಎದೆನೋವು ಮತ್ತು ಸಕ್ಕರೆ ಖಾಯಿಲೆ ಗಂಭೀರವಾಗಿರುವ ಕಾರಣ ಎಚ್ಚರಿಕೆಯಿಂದ ಚಿಕಿತ್ಸೆ ನೀಡುವ ಅಗತ್ಯವಿದೆ.ಇಂದು ಯಡಿಯೂರಪ್ಪ ನವರಿಗೆ ಆಂಜಿಯೋಗ್ರಾಮ್ ಮಾಡಲಾಗುವುದು ಎಂದು ಮಂಜುನಾಥ್ ಇದೇ ಸಂದರ್ಭದಲ್ಲಿ ಹೇಳಿದರು.
No comments:
Post a Comment